ರಾಮಮೂರ್ತಿ ನಗರದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೊಯ್ಸಳ ನಗರದಲ್ಲಿ ವಾಸವಿದ್ದ ಪಿರ್ಯಾದುದಾರರ ಮಗ ಮತ್ತು ಸೊಸೆ 2024ರ ಅಕ್ಟೋಬರ್ನಲ್ಲಿ ತಮಿಳುನಾಡಿಗೆ ಹೋಗಿದ್ದರು. ಆ ಸಮಯದಲ್ಲಿ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿತ್ತು.
ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿ ಈಗಾಗಲೇ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿಯನ್ನು ಪೊಲೀಸರು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದಿದ್ದರು. ವಿಚಾರಣೆಯ ವೇಳೆ ಆತ ಕಳವು ಮಾಡಿದ ಚಿನ್ನಾಭರಣಗಳನ್ನು ಗೋವಾದ ಎರಡು ಜ್ಯೂವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ನೀಡಿದ ಮಾಹಿತಿ ಮೇರೆಗೆ ಗೋವಾಕ್ಕೆ ತೆರಳಿದ ಪೊಲೀಸ್ ತಂಡವು ಅಲ್ಲಿಂದ ಒಟ್ಟು 527 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಈ ಆರೋಪಿಯ ಬಂಧನದಿಂದ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು ಆರು ಕನ್ನ ಕಳವು ಪ್ರಕರಣಗಳು ಪತ್ತೆಯಾದಂತಾಗಿವೆ. ಪೂರ್ವ ವಿಭಾಗದ ಡಿಸಿಪಿ ಡಾ. ವಿಕ್ರಮ ಅಮಟೆ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಬಾಣಸವಾಡಿ ಎಸಿಪಿ ಶ್ರೀ. ಉಮಾಶಂಕರ್ ಎಂ ಹೆಚ್ ಅವರ ನೇತೃತ್ವದಲ್ಲಿ ರಾಮಮೂರ್ತಿ ನಗರ ಇನ್ಸ್ಪೆಕ್ಟರ್ ಶ್ರೀ. ಸತೀಶ್ ಜಿ ಜೆ ಮತ್ತು ತಂಡ ಈ ಕಾರ್ಯಾಚರಣೆ ನಡೆಸಿದೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್