Share News

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 25 ಕೆಜಿಗೂ ಹೆಚ್ಚು ಸಿಂಥೆಟಿಕ್ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.

ಹುಣಸೂರು ತಾಲೂಕಿನ ದಾಸನಪುರ-ರತ್ನಪುರಿ ಮಾರ್ಗಮಧ್ಯೆ ಇರುವ ಇರ್ಫಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈ ಮಾದಕ ದ್ರವ್ಯದ ಜಾಲ ಪತ್ತೆಯಾಗಿದೆ. ಖಚಿತ ಮಾಹಿತಿಯ ಮೇರೆಗೆ ಹುಣಸೂರು ಪೊಲೀಸರು ತೋಟದ ಮೇಲೆ ಅನಿರೀಕ್ಷಿತ ದಾಳಿ ನಡೆಸಿದಾಗ, ಭಾರಿ ಪ್ರಮಾಣದ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ.

ಪೊಲೀಸರ ದಾಳಿ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಆದರೆ, ತೋಟದ ಮಾಲೀಕ ಇರ್ಫಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾದ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ವಶಪಡಿಸಿಕೊಳ್ಳಲಾದ ಸಿಂಥೆಟಿಕ್ ಡ್ರಗ್ಸ್ ಮೌಲ್ಯವು ಮಾರುಕಟ್ಟೆಯಲ್ಲಿ ಕೋಟ್ಯಂತರ ರೂಪಾಯಿ ಇರಬಹುದೆಂದು ಅಂದಾಜಿಸಲಾಗಿದೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ಚುರುಕುಗೊಂಡಿದೆ. ಮೈಸೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ದೊಡ್ಡ ಮಟ್ಟದ ಡ್ರಗ್ಸ್ ಬೇಟೆ ಇದಾಗಿದೆ ಎಂದು ಹೇಳಲಾಗುತ್ತಿದೆ.


Share News