Share News

ಕನಕಪುರ: ಇಲ್ಲಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಕೆರಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ 2023ರ ಆಗಸ್ಟ್ 14ರಂದು ರಾತ್ರಿ ವೇಳೆ ಕಿಡಿಗೇಡಿಗಳು ಕೆಂಕೆರಮ್ಮ ದೇವಸ್ಥಾನದೊಳಗೆ ನುಗ್ಗಿ ಕಳ್ಳತನ ಮಾಡಿದ್ದರು. ಈ ಬಗ್ಗೆ ದೇವಸ್ಥಾನದ ವತಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 134/2023, ಕಲಂ 380 ಐಪಿಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಕನಕಪುರ ಟೌನ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನಿಂದ ಅಂದಾಜು 1,18,000/- ರೂ. ಮೌಲ್ಯದ ಚಿನ್ನದ ಒಡವೆಗಳು ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಹಳ ದಿನಗಳಿಂದ ಪೊಲೀಸರಿಗೆ ಸವಾಲಾಗಿದ್ದ ಈ ದೇವಸ್ಥಾನದ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ ಕನಕಪುರ ಟೌನ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡದ ಕಾರ್ಯಕ್ಷಮತೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ.

ವರದಿ:- ಗಿಲ್ಬರ್ಟ್. ಜೆ


Share News