ಮಡಿಕೇರಿ: ಕೆಲಸದ ಒತ್ತಡಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಂಜಪಂಡ ಯು. ರೋಹಿಣಿ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಭಾನುವಾರ ಮನೆಯಲ್ಲಿದ್ದ ವೇಳೆ ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ಪಕ್ಕದ ಕೋಣೆಯಲ್ಲಿದ್ದ ಪತಿ ಕರುಂಬಯ್ಯ ಹಾಗೂ ಮಗಳು ಓಡಿ ಬಂದಾಗ ರೋಹಿಣಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಭಾಗಮಂಡಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕಳೆದ 25 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರೋಹಿಣಿ ಅವರು ಸಾವಿರಾರು ವಿದ್ಯಾರ್ಥಿಗಳ ಪಾಲಿಗೆ ನೆಚ್ಚಿನ ಶಿಕ್ಷಕಿಯಾಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ಜನಗಣತಿ ಕಾರ್ಯದ ನಿಮಿತ್ತ ಅವರಿಗೆ ಅತಿಯಾದ ಕೆಲಸದ ಒತ್ತಡವಿತ್ತು ಎನ್ನಲಾಗಿದೆ. ಇದೇ ಮಾನಸಿಕ ಒತ್ತಡಕ್ಕೆ ಮಣಿದು ಅವರು ಈ ತೀವ್ರ ನಿರ್ಧಾರ ಕೈಗೊಂಡಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.
ವೃತ್ತಿಜೀವನದಲ್ಲಿ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದ್ದ ಶಿಕ್ಷಕಿಯ ಸಾವಿನ ಸುದ್ದಿ ಕೇಳಿ ಚೇರಂಬಾಣೆ ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸರ್ಕಾರಿ ಕೆಲಸದ ಒತ್ತಡದ ಬಗ್ಗೆ ಶಿಕ್ಷಕ ವಲಯದಲ್ಲಿ ಈಗ ಭಾರಿ ಚರ್ಚೆ ಆರಂಭವಾಗಿದೆ.