Share News

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಯುವ ಜನತೆಯನ್ನು ಗುರಿಯಾಗಿಸಿಕೊಂಡು ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಗಾಂಜಾ ದಂಧೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಬರೋಬ್ಬರಿ 19.23 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

​ನಗರದ ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮೇಶ್ವರ್ ಕಾಲೋನಿಯಲ್ಲಿ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ.

ಸಂಗಮೇಶ್ವರ್ ಕಾಲೋನಿಯ ನಿವಾಸವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟುಕೊಂಡು, ಅಲ್ಲಿಂದಲೇ ಗ್ರಾಹಕರಿಗೆ ಹಾಗೂ ಕಾಲೇಜು ಯುವಕರಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಉನ್ನತಾಧಿಕಾರಿಗಳ ಮಾರ್ಗದರ್ಶನದಲ್ಲಿ ತಂಡ ರಚಿಸಿಕೊಂಡು ಗಾಂಧಿ ಗಂಜ್ ಪೊಲೀಸರು ಜಾಗದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮನೆಯಲ್ಲಿ ಬಚ್ಚಿಡಲಾಗಿದ್ದ 38 ಕೆಜಿ 476 ಗ್ರಾಂ ತೂಕದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಇದರ ಅಂದಾಜು ಮಾರುಕಟ್ಟೆ ಮುಖಬೆಲೆ 19,23,800 ರೂಪಾಯಿಗಳು ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯ ಕುರಿತು ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (ಎಸ್ಪಿ) ಶ್ರೀ ಪ್ರದೀಪ್ ಗುಂಟಿ ಅವರು, “ಅಕ್ರಮ ಗಾಂಜಾ ಜಾಲದ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಈ ದಂಧೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ಸಮಾಜದ ಶಾಂತಿ ಕದಡುತ್ತಿರುವ ಇಬ್ಬರು ಪ್ರಮುಖ ಆರೋಪಿಗಳನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಲು ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯುವ ಪೀಳಿಗೆಯನ್ನು ದಾರಿತಪ್ಪದಂತೆ ತಡೆದ ಬೀದರ್ ಪೊಲೀಸ್ ಇಲಾಖೆಯ ಈ ಭರ್ಜರಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಇದೇ ವೇಳೆ ಬೀದರ್ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಗಾಂಜಾ ಜಾಲ ಸಕ್ರಿಯವಾಗುತ್ತಿದೆಯೇ? ಎಂಬ ಪ್ರಶ್ನೆ ಮತ್ತು ಆತಂಕ ಸಾರ್ವಜನಿಕರನ್ನು ಕಾಡಲಾರಂಭಿಸಿದೆ. ಪೊಲೀಸರು ಇಂತಹ ಜಾಲಗಳ ಬೇರು ಸಿದ್ಧಾಂತವನ್ನೇ ಸವರಿ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

 


Share News