ಹಾವೇರಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಎನ್ಡಿಪಿಎಸ್ (NDPS) ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ನಿಯಮಾನುಸಾರ ಸುಟ್ಟು ನಾಶಪಡಿಸಲಾಗಿದೆ.
ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ನಿಗದಿತ ಸ್ಥಳದಲ್ಲಿ ಈ ಗಾಂಜಾ ವಿಲೇವಾರಿ ಪ್ರಕ್ರಿಯೆಯನ್ನು ನಡೆಸಲಾಯಿತು. ಹಾವೇರಿ ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಜಾಲದ ವಿರುದ್ಧ ಕೈಗೊಳ್ಳಲಾದ ವಿವಿಧ ದಾಳಿಗಳ ಸಂದರ್ಭದಲ್ಲಿ ಈ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ನ್ಯಾಯಾಲಯ ಹಾಗೂ ಉನ್ನತ ಅಧಿಕಾರಿಗಳ ನಿರ್ದೇಶನದಂತೆ ತಾರಿಹಾಳದಲ್ಲಿ ಇದನ್ನು ಸಂಪೂರ್ಣವಾಗಿ ಸುಟ್ಟು ಭಸ್ಮ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಣೆಬೆನ್ನೂರು ಹಾಗೂ ಹಾವೇರಿ ವಿಭಾಗದ ಪೊಲೀಸ್ ಉಪಾಧೀಕ್ಷಕರು (DySP) ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು, ನಿಯಮಾವಳಿಗಳ ಪ್ರಕಾರ ವಿಲೇವಾರಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.