Share News

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರ ಮನೆಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಬೇಕು. ಅಲ್ಲದೆ, ಪರಿಹಾರ ಧನ ಮಂಜೂರಾತಿಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಲು ನಿಯಮಾನುಸಾರ ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ’ಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಅರಕಲವಾಡಿ ನಾಗೇಂದ್ರ, ಸಿದ್ದರಾಜು ಹಾಗೂ ಹೆಚ್.ಬಿ. ವೃಷಬೇಂದ್ರ ಸೇರಿದಂತೆ ಇತರೆ ಸದಸ್ಯರು, ಸಂತ್ರಸ್ತರಿಗೆ ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮಾಹಿತಿ ತಲುಪಿಸುವ ಅಗತ್ಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಯವರು, “ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವ ಸಂತ್ರಸ್ತರನ್ನು ಅಧಿಕಾರಿಗಳು ನಿರಂತರವಾಗಿ ಸಂಪರ್ಕಿಸಿ ಮಾಹಿತಿ ನೀಡಬೇಕು. ನ್ಯಾಯಾಲಯಕ್ಕೆ ಬರುವ ಸಂತ್ರಸ್ತರಿಗೆ ನಿಯಮಾವಳಿಗಳ ಪ್ರಕಾರ ಪ್ರಯಾಣ ಭತ್ಯೆ (TA) ಹಾಗೂ ತುಟ್ಟಿ ಭತ್ಯೆಗಳನ್ನು (DA) ಕಡ್ಡಾಯವಾಗಿ ಮಂಜೂರು ಮಾಡಬೇಕು” ಎಂದು ನಿರ್ದೇಶನ ನೀಡಿದರು.

ಮಸಣಾಪುರ ಮತ್ತು ಹೊಂಗನೂರು ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಗಳು ಮರುಕಳಿಸಬಾರದು. ಎಲ್ಲಿಯೇ ಆಗಲಿ ಇಂತಹ ಘಟನೆಗಳು ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಮಿತಿ ಸದಸ್ಯರು ಆಗ್ರಹಿಸಿದರು. ಇದರೊಂದಿಗೆ, ತಾಲೂಕು ಮಟ್ಟದ ಹಿತರಕ್ಷಣಾ ಸಮಿತಿ ಸಭೆಗಳು ಹಾಗೂ ಶಾಂತಿ ಸಭೆಗಳಲ್ಲಿ ಸ್ಥಳೀಯ ಜಾಗೃತಿ ಸಮಿತಿ ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸಬೇಕು ಮತ್ತು ಅಧಿಕಾರಿಗಳು ಸಭೆಗಳಿಗೆ ಗೈರಾಗದೆ ಹಾಜರಿರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಯಿತು.

ಪರಿಶಿಷ್ಟರು ವಾಸಿಸುವ ಗ್ರಾಮ ಹಾಗೂ ಬುಡಕಟ್ಟು ಜನಾಂಗದ ಪ್ರದೇಶಗಳಲ್ಲಿ ಯುವಜನರು ದಾರಿತಪ್ಪದಂತೆ ತಡೆಯಲು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವ್ಯಾಪಕ ಜಾಗೃತಿ ಕಾರ್ಯಕ್ರಮಗಳು ಮತ್ತು ವಿಶೇಷ ಶಿಬಿರಗಳನ್ನು ಆಯೋಜಿಸಲು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಎಸ್‌ಪಿ ಎಂ.ಎನ್. ಶಶಿಧರ್, ಡಿವೈಎಸ್‌ಪಿ ಸ್ನೇಹರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 


Share News