Share News

ಬೆಂಗಳೂರು: ರಾಮಮೂರ್ತಿನಗರದಲ್ಲಿ ರಸ್ತೆಬದಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

​ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ನಿವಾಸಿ, ಹಣ್ಣಿನ ವ್ಯಾಪಾರಿಯಾಗಿರುವ 42 ವರ್ಷದ ವಿಜಯ್ ರಾಘವ್ ಬಂಧಿತ ಆರೋಪಿ.

ರಸ್ತೆಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿ ಬಳಿ ಸ್ಕೂಟರ್‌ನಲ್ಲಿ ಬಂದ ಆರೋಪಿ “ರೇಟ್ ಎಷ್ಟು?” ಎಂದು ಕೇಳಿ ಕಿರುಕುಳ ನೀಡಿದ್ದಾನೆ. ಯುವತಿ ಈ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಲು ಮುಂದಾದಾಗ ಹಾಗೂ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದನು.

​ನಂತರ ಯುವತಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದು, ಹೆಚ್ಚಿನ ವಿಚಾರಣೆ ಕಾಯ್ದಿರಿಸಿದ್ದಾರೆ.

 


Share News