ನಂಜನಗೂಡು: ನಂಜನಗೂಡು – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 60ಕ್ಕೂ ಹೆಚ್ಚು ಜಾನುವಾರುಗಳನ್ನು ದೊಡ್ಡಕವಲಂದೆ ಠಾಣೆ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಕಾರ್ಯಾಚರಣೆ ವೇಳೆ ಕ್ಯಾಂಟರ್ ಒಂದರ ಕ್ಲೀನರ್ನನ್ನು ಬಂಧಿಸಲಾಗಿದ್ದು, ಇಬ್ಬರು ಚಾಲಕರು ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
ಮೈಸೂರು ಮೂಲದ ಸಯ್ಯದ್ ಜಾವೀದ್ (43) ಬಂಧಿತ ಕ್ಲೀನರ್.
ದೊಡ್ಡಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಅವರ ನೇತೃತ್ವದಲ್ಲಿ ಸಿಬ್ಬಂದಿಯು ನಂಜನಗೂಡು – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಾಲಾಗಿ ಬಂದ ಎರಡು ಕ್ಯಾಂಟರ್ (KA-01-AG-4796 ಹಾಗೂ KA-16-B-5714) ವಾಹನಗಳನ್ನು ತಡೆದು ಪರಿಶೀಲಿಸಿದಾಗ, ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ರಸ್ತೆಯಲ್ಲಿ ಪೊಲೀಸರ ತಪಾಸಣೆ ಕಂಡು ಗಾಬರಿಗೊಂಡ ಇಬ್ಬರು ಕ್ಯಾಂಟರ್ ಚಾಲಕರು ವಾಹನಗಳನ್ನು ಸ್ಥಳದಲ್ಲೇ ಬಿಟ್ಟು ಕತ್ತಲಲ್ಲಿ ಪರಾರಿಯಾಗಿದ್ದಾರೆ. ಈ ವೇಳೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ವಾಹನದಲ್ಲಿದ್ದ ಕ್ಲೀನರ್ ಸಯ್ಯದ್ ಜಾವೀದ್ನನ್ನು ವಶಕ್ಕೆ ಪಡೆದಿದ್ದಾರೆ.
ವಾಹನಗಳಲ್ಲಿದ್ದ 60ಕ್ಕೂ ಹೆಚ್ಚು ಜಾನುವಾರುಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಈ ಸಂಬಂಧ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಚಾಲಕರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.