ಉತ್ತರಕನ್ನಡ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ನಡೆದ ಉಡ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ ತಂದೆ ಹಾಗೂ ಮಗನನ್ನು ಬಂಧಿಸಿದ್ದಾರೆ. ಬಂಧಿತರನ್ನು ಇನಾಸ್ ಬಸ್ಥ್ಯಾಂವ್ ಸಿದ್ದಿ ಮತ್ತು ಪ್ರಕಾಶ್ ಇನಾಸ್ ಸಿದ್ದಿ ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಮೃತ ಉಡಗಳು ಪತ್ತೆ:
ಖಚಿತ ಮಾಹಿತಿ ಆಧರಿಸಿ ಕಣ್ಣಿಗೇರಿ ಗ್ರಾಮದಲ್ಲಿರುವ ಆರೋಪಿಗಳ ನಿವಾಸದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಎರಡು ಮೃತಪಟ್ಟ ಉಡಗಳು ಪತ್ತೆಯಾಗಿದ್ದು, ಇವುಗಳನ್ನು ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ:
ಕಾಡುಪ್ರಾಣಿ ಬೇಟೆಯಾಡಿದ ಆರೋಪದ ಮೇಲೆ ಬಂಧಿತ ತಂದೆ-ಮಗ ಇಬ್ಬರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ.

Arakshakara Times Media
Related posts
