ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಂದ ತಯಾರಿಸಲಾಗುತ್ತಿರುವ ವಿವಿಧ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ, ಆಕರ್ಷಕ ಪ್ಯಾಕೇಜಿಂಗ್‌ನೊಂದಿಗೆ ಮಾರುಕಟ್ಟೆಗೆ ಪರಿಚಯಿಸುವಂತೆ ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿಯ 5ನೇ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ಇಂದು ಯಶಸ್ವಿಯಾಗಿ ನಡೆಯಿತು. ಮಂಡಳಿಯನ್ನು ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಭೆಯಲ್ಲಿ ನಿರ್ದೇಶಿಸಲಾಯಿತು.
ಸಭೆಯ ಪ್ರಮುಖ ಮುಖ್ಯಾಂಶಗಳು ಹಾಗೂ ನಿರ್ಣಯಗಳು:
ಆಕರ್ಷಕ ಪ್ಯಾಕೇಜಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ: ಕೈದಿಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು, ಮಾರಾಟವನ್ನು ಹೆಚ್ಚಿಸುವುದು ಹಾಗೂ ಗುಣಮಟ್ಟದೊಂದಿಗೆ ಆಕರ್ಷಕ ಪ್ಯಾಕೇಜಿಂಗ್ ವ್ಯವಸ್ಥೆ ಕಲ್ಪಿಸುವ ಮೂಲಕ ಹೆಚ್ಚಿನ ಬೇಡಿಕೆ ಸೃಷ್ಟಿಸುವುದು.
ಮಂಡಳಿ ಸ್ವಾವಲಂಬನೆ: ಕೈದಿಗಳ ಪುನರ್ವಸತಿ ಮತ್ತು ಕೌಶಲಾಭಿವೃದ್ಧಿಗೆ ಉತ್ತೇಜನ ನೀಡುವುದರ ಜೊತೆಗೆ, ಕಾರಾಗೃಹ ಅಭಿವೃದ್ಧಿ ಮಂಡಳಿಯ ಆದಾಯವನ್ನು ಹೆಚ್ಚಿಸಿ ಮಂಡಳಿಯನ್ನು ಸ್ವಾವಲಂಬಿಯನ್ನಾಗಿ ಮಾಡುವುದು.
ಸುಧಾರಣಾ ಕ್ರಮಗಳು: ಕಾರಾಗೃಹಗಳಲ್ಲಿ ಕಲಾ ಚಿಕಿತ್ಸಾ ಕಾರ್ಯಕ್ರಮಗಳ ಅನುಷ್ಠಾನ, ಕೈದಿಗಳ ಮಾನಸಿಕ ಪರಿವರ್ತನೆಗಾಗಿ ಸ್ವಯಂಸೇವಾ ಸಂಸ್ಥೆಗಳ ಸಹಯೋಗ, ವ್ಯಸನಮುಕ್ತ ಕೇಂದ್ರಗಳ ಸ್ಥಾಪನೆ ಹಾಗೂ ವೃತ್ತಿಪರ ತರಬೇತಿ ನೀಡುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು.
ಬಾಕ್ಸ್ ಸುದ್ದಿ: ಸಭೆಗೆ ಗೈರಾದ ಇಲಾಖಾ ಮುಖ್ಯಸ್ಥರ ವಿರುದ್ಧ ಸಚಿವರ ತೀವ್ರ ಅಸಮಾಧಾನ
ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿಯ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಮುನ್ಸೂಚನೆ ನೀಡಿದ್ದರೂ, ಆರೋಗ್ಯ, ಪಶುಸಂಗೋಪನೆ, ಕೃಷಿ, ತೋಟಗಾರಿಕೆ ಹಾಗೂ ಕೈಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಗೆ ಗೈರುಹಾಜರಾಗಿ ತಮ್ಮ ಬದಲಿಗೆ ಕಿರಿಯ ಅಧಿಕಾರಿಗಳನ್ನು ಕಳುಹಿಸಿಕೊಟ್ಟಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯ ಮಹತ್ವವನ್ನು ಅರಿತು ಇಲಾಖಾ ಮುಖ್ಯಸ್ಥರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಸಭೆಗಳಿಗೆ ಖುದ್ದು ಹಾಜರಾಗಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದ ಸಚಿವರು, ಸಭೆಗೆ ಹಾಜರಾಗಿದ್ದ ಕಿರಿಯ ಅಧಿಕಾರಿಗಳನ್ನು ಸಭೆಯಿಂದ ಹೊರಗೆ ಕಳುಹಿಸುವ ಮೂಲಕ ತಮ್ಮ ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು.
ಭಾಗವಹಿಸಿದ್ದ ಉನ್ನತ ಅಧಿಕಾರಿಗಳು:
ಈ ಮಹತ್ವದ ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯ, ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಸಲೀಂ, ಪೊಲೀಸ್ ಮಹಾ ನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್, ಗೃಹ ಇಲಾಖೆಯ ಕಾರ್ಯದರ್ಶಿ ಶರಶ್ಚಂದ್ರ ಹಾಗೂ ಇತ್ತೀಚಿನ ಇನ್ನಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Arakshakara Times Media
Related posts
