ಆನೇಕಲ್: ಪಟ್ಟಣದಲ್ಲಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಹಾಗೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಕಟ್ಟುನಿಟ್ಟಿನ ಹಿತದೃಷ್ಟಿಯಿಂದ, ಆನೇಕಲ್ ಟೌನ್ ವ್ಯಾಪ್ತಿಯೊಳಗೆ ಭಾರಿ ಸರಕು ಮತ್ತು ವಾಣಿಜ್ಯ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಪ್ರಾಧಿಕಾರದ ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಆನೇಕಲ್ ಟೌನ್ ಒಳಗೆ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಯಾವುದೇ ಭಾರಿ ವಾಹನಗಳು ಸಂಚರಿಸುವಂತಿಲ್ಲ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:
ಈ ಹೊಸ ಸಂಚಾರ ನಿಯಮವನ್ನು ಉಲ್ಲಂಘಿಸಿ ಟೌನ್ ಭಾಗಕ್ಕೆ ಅನಧಿಕೃತವಾಗಿ ಪ್ರವೇಶಿಸುವ ವಾಹನಗಳ ಚಾಲಕರು ಹಾಗೂ ಮಾಲೀಕರ ವಿರುದ್ಧ ಆನೇಕಲ್ ಪೊಲೀಸರು ಮುಲಾಜಿಲ್ಲದೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಿದ್ದಾರೆ. ಅಲ್ಲದೆ, ನಿಯಮ ಮೀರುವವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರ ಸಹಕಾರಕ್ಕೆ ಮನವಿ:
ಸಾರ್ವಜನಿಕರ ಜೀವ ರಕ್ಷಣೆ ಮತ್ತು ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಆಡಳಿತ ಮಂಡಳಿಯು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ವಾಹನ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಆಡಳಿತದೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಅಧಿಕೃತವಾಗಿ ಕೋರಲಾಗಿದೆ.
Arakshakara Times Media
Related posts
