ಬೆಂಗಳೂರು: ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ ಸಂಜೆ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರೊಂದಿಗೆ ವಾಸವಾಗಿದ್ದಳು. ಕಳೆದ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಹಠಾತ್ತನೆ ನಾಪತ್ತೆಯಾಗಿದ್ದಳು. ಪೋಷಕರು ಮತ್ತು ಸ್ಥಳೀಯರು ಎಲ್ಲೆಡೆ ಹುಡುಕಾಡಿದರೂ ಮಗು ಪತ್ತೆಯಾಗದಿದ್ದಾಗ, ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಗಿತ್ತು.
ಪೊಲೀಸರು ತನಿಖೆ ನಡೆಸುತ್ತಿದ್ದಾಗ, ಶನಿವಾರ ಸಂಜೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಪತ್ತೆಯಾದ ಸಮಯದಲ್ಲಿ ಶವವು ಸಂಪೂರ್ಣ ನಗ್ನ ಸ್ಥಿತಿಯಲ್ಲಿದ್ದು, ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಲವಾದ ಶಂಕೆ ವ್ಯಕ್ತವಾಗಿದೆ.
ಕಿರಾತಕರು ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಮಗುವಿನ ಗುರುತು ಪತ್ತೆಯಾಗಬಾರದೆಂಬ ವಿಕೃತ ಉದ್ದೇಶದಿಂದ ಮುಖವನ್ನು ಕಲ್ಲಿನಿಂದ ಜಜ್ಜಿ ವಿಕಾರಗೊಳಿಸಲಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪೋಕ್ಸೋ (POCSO) ಕಾಯ್ದೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಮಾನುಷ ಕೃತ್ಯ ಎಸಗಿದ ಕಾಮುಕರನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ :- ಗಿಲ್ಬರ್ಟ್. ಜೆ