ಬೆಂಗಳೂರು: ಅಕ್ಷಯ ತೃತೀಯ ಮತ್ತು ಬಸವ ಜಯಂತಿಯಂತಹ ಶುಭ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿದ್ದು, ಇದನ್ನು ತಡೆಗಟ್ಟಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಕಾನೂನಿನ ಪ್ರಕಾರ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುತ್ತದೆ. ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿಗಿಂತ ಕೆಳಗಿದ್ದರೂ ಅದು ಕಾನೂನುಬಾಹಿರ ಕೃತ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಅಡಿಯಲ್ಲಿ ಬಾಲ್ಯವಿವಾಹ ಏರ್ಪಡಿಸುವುದು ಗಂಭೀರ ಅಪರಾಧವಾಗಿದೆ:
ಶಿಕ್ಷೆ: ತಪ್ಪಿತಸ್ಥ ಪೋಷಕರು, ಪಾಲಕರು ಹಾಗೂ ಮದುವೆಗೆ ಸಹಕರಿಸುವವರಿಗೆ ಕನಿಷ್ಠ 1 ವರ್ಷದಿಂದ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ದಂಡ: ನಿಯಮ ಉಲ್ಲಂಘಿಸುವವರಿಗೆ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಪೊಲೀಸ್ ಅಧಿಕಾರಿಗಳು ಸ್ವಪ್ರೇರಿತವಾಗಿ (Suo Moto) ದೂರು ದಾಖಲಿಸಿಕೊಳ್ಳಲು ಅವಕಾಶವಿದೆ. ಇದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನೂ ಈ ಪಿಡುಗಿನ ವಿರುದ್ಧ ಧ್ವನಿ ಎತ್ತಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
ಜಿಲ್ಲೆಯ ಎಲ್ಲಾ ಕಲ್ಯಾಣ ಮಂಟಪಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳ ಸಂದರ್ಭದಲ್ಲಿ ವಯಸ್ಸಿನ ದಾಖಲೆಗಳನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಬಾಲ್ಯವಿವಾಹ ಜರುಗದಂತೆ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಲಾಗಿದೆ.
ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳಿಗೆ ಕೂಡಲೇ ಮಾಹಿತಿ ನೀಡಬಹುದು:
ಮಕ್ಕಳ ಸಹಾಯವಾಣಿ: 1098
ಪೊಲೀಸ್ ಸಹಾಯವಾಣಿ: 112
ಮಕ್ಕಳ ರಕ್ಷಣಾ ಘಟಕ: 080-29560034
ಸಮಾಜಕ್ಕೆ ಮಾರಕವಾಗಿರುವ ಬಾಲ್ಯವಿವಾಹವನ್ನು ಮುಕ್ತಗೊಳಿಸಲು ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕೆಂದು ಡಾ. ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.