ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ರಿಮಿನಲ್‌ಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಶವ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಮೃತನನ್ನು ಕಿರಣ್ (25) ಎಂದು ಗುರುತಿಸಲಾಗಿದೆ. ಈತ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಕೊಲೆಗೂ ಮುನ್ನ ಅಂದರೆ ನಿನ್ನೆ ರಾತ್ರಿ ಕಿರಣ್ ಯಾವುದೋ ವಿಷಯಕ್ಕೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಕಿತ್ತಾಟ ತಡರಾತ್ರಿಯವರೆಗೂ ಮುಂದುವರಿದಿತ್ತು. ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಹೊಂಚು ಹಾಕಿದ್ದ ದುಷ್ಕರ್ಮಿಗಳು, ಕಿರಣ್‌ನನ್ನು ಅಟ್ಟಾಡಿಸಿ ತಲೆಗೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಕಿರಣ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.
ಕಿರಣ್ ಹಲವು ಬಾರಿ ಕುಡಿದು ಗಲಾಟೆ ಮಾಡಿಕೊಂಡಿದ್ದ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದಿನ ವೈಷಮ್ಯ ಅಥವಾ ಹಳೇ ದ್ವೇಷದ ಹಿನ್ನೆಲೆಯಲ್ಲೇ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ನಡೆದ ತಕ್ಷಣ ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿ ಜಾಲ ಬೀಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.