ಬಿಡದಿ: ಫಾರಂ ಹೌಸ್ ಒಂದರ ಬೀಗ ಮುರಿದು ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದಲ್ಲಿರುವ ಫಾರಂ ಒಂದರ ಬೀಗ ಮುರಿದು, ಅಲ್ಲಿನ ಕುರಿ ಮತ್ತು ಮೇಕೆಗಳನ್ನು ಕಳ್ಳರು ಅಪಹರಿಸಿದ್ದರು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಮೊ.ಸಂ: 72/2026, ಕಲಂ: 331(4), 305 BNS) ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 2.80 ಲಕ್ಷ ರೂ. ಮೌಲ್ಯದ ಕುರಿ ಮತ್ತು ಮೇಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಇತರ ಕಳ್ಳತನ ಪ್ರಕರಣಗಳನ್ನೂ ಒಪ್ಪಿಕೊಂಡಿದ್ದು, ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ 2 ದ್ವಿಚಕ್ರ ವಾಹನಗಳು ಹಾಗೂ 1 ಓಮಿನಿ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯ ಮೂಲಕ ಒಟ್ಟು ಮೂರು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ.
“ಕುರಿ-ಮೇಕೆ ಕಳ್ಳತನದ ದೂರಿನ ಮೇರೆಗೆ ತನಿಖೆ ನಡೆಸಿ, ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಕಳವು ಮಾಡಿದ್ದ ವಾಹನಗಳನ್ನೂ ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಕ್ಷತೆಯಿಂದ ಕಾರ್ಯನಿರ್ವಹಿಸಿ ಕಳ್ಳರನ್ನು ಪತ್ತೆಹಚ್ಚಿದ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.