ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಅಭಿವೃದ್ಧಿಯ ಕೊರತೆಯ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಸರ್ಕಾರದ ನಡೆಗೆ ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಬಡ ಹಾಗೂ ಮಧ್ಯಮ ವರ್ಗದ ಹೆಚ್ಚಿನ ಸಂಖ್ಯೆಯ ಮಕ್ಕಳು ಬರಬಾರದು ಎಂಬ ಕಾರಣಕ್ಕಾಗಿಯೇ ವ್ಯವಸ್ಥಿತವಾಗಿ ಶಾಲೆಗಳನ್ನು ಅಭಿವೃದ್ಧಿಪಡಿಸದೆ ಕಡೆಗಣಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಕಟ್ಟಡ, ಶೌಚಾಲಯ, ಕುಡಿಯುವ ನೀರು ಹಾಗೂ ಅಗತ್ಯ ಶಿಕ್ಷಕರನ್ನು ಒದಗಿಸದೆ ಮೊದಲು ಶಾಲೆಗಳನ್ನು ದುಃಸ್ಥಿತಿಗೆ ತಳ್ಳಲಾಗುತ್ತದೆ. ಮೂಲಸೌಕರ್ಯ ಇಲ್ಲದ ಕಾರಣಕ್ಕೆ ಪೋಷಕರು ಅನಿವಾರ್ಯವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ತದನಂತರ, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ ಎಂಬ ತಾಂತ್ರಿಕ ನೆಪವನ್ನು ಮುನ್ನೆಲೆಗೆ ತಂದು, ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚಲು ಯೋಜನೆ ರೂಪಿಸಲಾಗುತ್ತಿದೆ” ಎಂದು ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಬಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ನೀಡಬೇಕಾದ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲಾಗಿ, ಅವುಗಳ ಪತನಕ್ಕೆ ದಾರಿ ಮಾಡಿಕೊಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. “ಶಿಕ್ಷಣ ಕ್ಷೇತ್ರದ ಸುಧಾರಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಭಾಷಣ ಬಿಗಿಯುವ ಸರ್ಕಾರದ ಅಸಲಿ ಸಾಧನೆ ಇದೇನಾ?” ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಪ್ರಮುಖ ವೇದಿಕೆಗಳಲ್ಲಿ ಪ್ರಶ್ನಿಸುತ್ತಿದ್ದಾರೆ.
ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಬೇಕಾದ ಇಲಾಖೆಯು ಈ ಬಗೆಯ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಟ್ಟು, ತಕ್ಷಣವೇ ಎಲ್ಲಾ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.