Share News

ಹಾಸನ: ತಹಶೀಲ್ದಾರ್ ಅವರು ಪ್ರಯಾಣಿಸುತ್ತಿದ್ದ ಸರ್ಕಾರಿ ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಧಾವಂತದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ಸಂಭವಿಸಿದೆ.

ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಅವರು ತಮ್ಮ ಅಧಿಕೃತ ಸರ್ಕಾರಿ ಜೀಪಿನಲ್ಲಿ ಸಕಲೇಶಪುರದಿಂದ ಹಾಸನ ನಗರದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈಶ್ವರಹಳ್ಳಿ ಕೂಡಿಗೆ ರಸ್ತೆಯ ಬಳಿ ಜೀಪ್ ಸಾಗುತ್ತಿದ್ದಾಗ ಎದುರಿನಿಂದ ಬಂದ ಬೈಕ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಭೀಕರತೆಗೆ ಬೈಕ್ ಸವಾರನ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನು ಬೈಕ್ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅಪಘಾತ ನಡೆದ ತಕ್ಷಣವೇ ಸ್ಥಳೀಯರ ಸಹಾಯದಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆಲೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಬೈಕ್ ಸವಾರನ ನಿಖರವಾದ ಗುರುತು ಹಾಗೂ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ರಸ್ತೆ ಅಪಘಾತದ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.

 


Share News