ಆನೇಕಲ್: ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಕಚೇರಿಯನ್ನು ಶಾಸಕ ಬಿ. ಶಿವಣ್ಣ ಅವರು ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಿದರು. ಇದೇ ವೇಳೆ ಕಚೇರಿಯ ನೂತನ ವಿಡಿಯೋ ಕಾನ್ಫರೆನ್ಸ್ ಹಾಲ್ನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ (IPS) ಅವರು ಉದ್ಘಾಟಿಸಿದರು.
ಇಲ್ಲಿಯವರೆಗೆ ಗ್ರಾಮಾಂತರ ಪೊಲೀಸ್ ವಿಭಾಗದ ವ್ಯಾಪ್ತಿಯಲ್ಲಿದ್ದ ಹೆಬ್ಬಗೋಡಿ ಪೊಲೀಸ್ ಠಾಣೆಯನ್ನು ಇದೀಗ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಈ ಹೊಸ ಕಚೇರಿಯು ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದ್ದು, ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಬಿ. ಶಿವಣ್ಣ, “ಹೆಬ್ಬಗೋಡಿ ಪ್ರದೇಶವು ಕೈಗಾರಿಕೆಗಳು ಹಾಗೂ ಜನಸಂಖ್ಯೆಯ ಬೆಳವಣಿಗೆಯೊಂದಿಗೆ ವೇಗವಾಗಿ ಬೆಳೆಯುತ್ತಿದೆ. ಈ ಭಾಗದ ಸಾರ್ವಜನಿಕರ ಸುರಕ್ಷತೆ ಮತ್ತು ಅಪರಾಧ ನಿಯಂತ್ರಣಕ್ಕೆ ಎಸಿಪಿ ಕಚೇರಿ ಅತ್ಯಂತ ಅವಶ್ಯಕವಾಗಿತ್ತು. ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು” ಎಂದು ಹೇಳಿದರು.
ಈ ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ರಾಮೋಜಿ ಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೀಮಂತ್ ಕುಮಾರ್ ಸಿಂಗ್, ಪೂರ್ವ ವಲಯದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬನೋತ್ (IPS), ಪೊಲೀಸ್ ಉಪ ಆಯುಕ್ತ ಎಂ. ನಾರಾಯಣ (IPS), ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್, ಎಸಿಪಿ ಸತೀಶ್, ಡಿವೈಎಸ್ಪಿ ಗೋಪಾಲ್ ನಾಯಕ್, ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಸೇರಿದಂತೆ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಉಪ ವಿಭಾಗದ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Arakshakara Times Media
Related posts
