ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಎಸ್ಪಿ ಸಾಹಿಲ್ ಬಾಗ್ಲಾ ಅವರ ನಿರ್ದೇಶನದ ಮೇರೆಗೆ ಪೊಲೀಸರ ವಿಶೇಷ ತಂಡ ರಚಿಸಿ, ಜಿಲ್ಲೆಯಾದ್ಯಂತ ಬಾರ್ ಹಾಗೂ ರೆಸ್ಟೋರೆಂಟ್ಗಳ ಮೇಲೆ ದಿಢೀರ್ ದಾಳಿ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಎರಡು ದಿನಗಳ ವಿಶೇಷ ಕಾರ್ಯಾಚರಣೆ:
ಅಕ್ಟೋಬರ್ 10 ಹಾಗೂ 11ರಂದು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡರು. ಜಿಲ್ಲೆಯ ವಿವಿಧ ಭಾಗಗಳ ಒಟ್ಟು 77 ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಪೊಲೀಸರ ವಿಶೇಷ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿ ಕೂಲಂಕಷವಾಗಿ ಪರಿಶೀಲನೆ ನಡೆಸಿದವು.
ದಾಳಿಗೆ ಪ್ರಮುಖ ಕಾರಣಗಳು:
ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಬಾಲಕಾರ್ಮಿಕ ಪದ್ಧತಿ ಅನುಸರಿಸಲಾಗುತ್ತಿದೆಯೆ ಎಂಬ ಬಗ್ಗೆ, ಜೂಜಾಟ ಮತ್ತು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದರ ಕುರಿತು, ಮಾದಕ ವಸ್ತುಗಳ ಬಳಕೆ ಹಾಗೂ ಗ್ರಾಹಕರಿಗೆ ಅವಧಿ ಮುಗಿದ (Expired) ಆಹಾರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.
ನಗದು ಹಾಗೂ ಪ್ರಕರಣಗಳ ವಿವರ:
ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ನಡೆದ ಈ ದಿಢೀರ್ ತಪಾಸಣೆ ವೇಳೆ ಜೂಜಾಟ ಹಾಗೂ ಮಟ್ಕಾ ಅಡ್ಡೆಗಳ ಮೇಲೆ ಮುದ್ರಿಬೆಳಕು ಚೆಲ್ಲಿದ ಪೊಲೀಸರು, ಒಟ್ಟು 39 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರ ಬಳಿಯಿಂದ ಒಟ್ಟು 2,15,210 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಾಹಿಲ್ ಬಾಗ್ಲಾ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಇಂತಹ ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ನಿಯಮ ಮೀರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Arakshakara Times Media
Related posts
