Share News

ಬೆಂಗಳೂರು: ದೇಶಾದ್ಯಂತ ದಿಢೀರನೆ ಎದುರಾಗಿರುವ ಅಡುಗೆ ಅನಿಲ ಸಿಲಿಂಡರ್‌ಗಳ ತೀವ್ರ ಅಭಾವ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ, ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ತಪ್ಪು ನೀತಿಗಳಿಂದಾಗಿ ಜನಸಾಮಾನ್ಯರು ಬೀದಿಗೆ ಬೀಳುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, “ಪ್ರಧಾನಿ ಮೋದಿ ಅವರ ಅಮೆರಿಕ ಪರವಾದ ಗುಲಾಮಗಿರಿ ವಿದೇಶಾಂಗ ನೀತಿಯಿಂದಾಗಿ ಇಂದು ದೇಶದ ಕೋಟ್ಯಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಭಾರತವು ಮೊದಲಿನಿಂದಲೂ ಅನುಸರಿಸಿಕೊಂಡು ಬಂದಿದ್ದ ‘ಅಲಿಪ್ತ ನೀತಿ’ಯನ್ನು ಬದಿಗೊತ್ತಿ, ಅಮೆರಿಕ ಮತ್ತು ಇಸ್ರೇಲ್‌ಗೆ ಶರಣಾಗತಿ ನೀತಿ ಅನುಸರಿಸುತ್ತಿರುವುದು ದೇಶದ ಆರ್ಥಿಕತೆಯ ಮೇಲೆ ಹೊಡೆತ ನೀಡಿದೆ. ಕೂಡಲೇ ಅನಿಲ ಪೂರೈಕೆಯನ್ನು ಸರಿಪಡಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು,” ಎಂದು ಎಚ್ಚರಿಸಿದರು.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಮಾತನಾಡಿ, “ರಾಜ್ಯದಲ್ಲಿ ಅನಿಲ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದ್ದರೂ ಸರ್ಕಾರ ಮೌನವಾಗಿದೆ. ವಿಧಾನಸಭೆಯಲ್ಲಿ ಆಹಾರ ಪೂರೈಕೆ ಸಚಿವ ಮುನಿಯಪ್ಪ ಅವರು ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಜನಸಾಮಾನ್ಯರ ಹಿತ ಕಾಯಬೇಕು,” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಮಠ, ಜಗದೀಶ್ ವಿ. ಸದಂ, ಲೋಹಿತ್ ಕುಮಾರ್, ಉಷಾ ಮೋಹನ್, ಪುಷ್ಪ ಕೇಶವ್, ರವಿಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

 


Share News