ಮಂಡ್ಯ: ನ್ಯಾಯಾಲಯದ ಅನುಮತಿಯಿಲ್ಲದೆ ಮಂಡ್ಯ ಕಾರಾಗೃಹದ ಕೈದಿಯೊಬ್ಬ ಮಿಮ್ಸ್ (MIMS) ಆಸ್ಪತ್ರೆಯ ವಾರ್ಡ್‌ನಲ್ಲಿ ದಾಖಲಾಗಿ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿ ಅಲೋಕ್ ಕುಮಾರ್, ತನಿಖೆಗೆ ಆದೇಶಿಸಿದ್ದಾರೆ. ಕಾರಾಗೃಹ ದಕ್ಷಿಣ ವಲಯದ ಡಿಐಜಿ ದಿವ್ಯಾಶ್ರೀ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಲಿದೆ.
ಮಂಡ್ಯ ಮಿಮ್ಸ್ ಆಸ್ಪತ್ರೆಗೆ ನ್ಯಾಯಾಧೀಶರ ತಂಡ ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ, ಕಾರಾಗೃಹದ ಕೈದಿ ಮಹಮ್ಮದ್ ಹುಸೇನ್ ಆಸ್ಪತ್ರೆಯ ವಾರ್ಡ್‌ನಲ್ಲಿರುವುದು ಗಮನಕ್ಕೆ ಬಂದಿತ್ತು. ಈ ಕುರಿತು ವಿಚಾರಣೆ ನಡೆಸಿದಾಗ, ನ್ಯಾಯಾಲಯದ ಯಾವುದೇ ಪೂರ್ವಾಪರ ಅನುಮತಿ ಪಡೆಯದೇ ಕಾನೂನು ಬಾಹಿರವಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿದ್ದ ಕೈದಿ:
ಕೈದಿ ಮಹಮ್ಮದ್ ಹುಸೇನ್ ಆಸ್ಪತ್ರೆಯಲ್ಲಿ ತನ್ನ ಗೆಳತಿಯೊಂದಿಗೆ ಇದ್ದುದನ್ನು ಕಂಡು ನ್ಯಾಯಾಧೀಶರ ತಂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾರಾಗೃಹ ಹಾಗೂ ಮಿಮ್ಸ್ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿದ ಡಿಜಿ ಅಲೋಕ್ ಕುಮಾರ್, ಸ್ಥಳೀಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ನ್ಯಾಯಾಲಯದ ನಿಯಮಗಳು ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತನಿಖೆಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.