Share News

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ.

​ಜಂಟಿ ಕೃಷಿ ನಿರ್ದೇಶಕರ (ಜಾಗೃತ ಕೋಶ) ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಜಪ್ತಿ ಮಾಡಲಾದ ರಸಗೊಬ್ಬರದ ಒಟ್ಟು ಅಂದಾಜು ಮೌಲ್ಯ ಸುಮಾರು ₹14,40,000 ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಗಾರು ಹಂಗಾಮು ಆರಂಭವಾಗುತ್ತಿರುವ ಬೆನ್ನಲ್ಲೇ ರೈತರಿಗೆ ಸಕಾಲದಲ್ಲಿ ವಿತರಿಸಬೇಕಾದ ಸರ್ಕಾರಿ ಸಬ್ಸಿಡಿ ಯುಕ್ತ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು, ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಲು ಸಂಚು ರೂಪಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಕೃಷಿ ಇಲಾಖೆಯ ಜಾಗೃತ ಕೋಶ ಹಾಗೂ ಸ್ಥಳೀಯ ಅಧಿಕಾರಿಗಳ ತಂಡ ತಕ್ಷಣವೇ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದ್ದಾರೆ.

​ಈ ಯಶಸ್ವಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮೈಸೂರು ಕೃಷಿ ಇಲಾಖೆಯ ಉಪ ನಿರ್ದೇಶಕರು, ಟಿ. ನರಸೀಪುರ ಸಹಾಯಕ ನಿರ್ದೇಶಕರು ಹಾಗೂ ಬನ್ನೂರು ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಟಿ. ನರಸೀಪುರ ಸಹಾಯಕ ನಿರ್ದೇಶಕರ ಮೂಲಕ ಅಕ್ರಮ ದಾಸ್ತಾನುದಾರರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅನ್ನದಾತರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಇಂತಹ ಅಕ್ರಮ ರಸಗೊಬ್ಬರ ದಾಸ್ತಾನು, ಕಾಳಸಂತೆ ದಂಧೆ ಹಾಗೂ ಕೃತಕ ಅಭಾವ ಸೃಷ್ಟಿಸುವ ಜಾಲಗಳ ವಿರುದ್ಧ ರಾಜ್ಯ ಸರ್ಕಾರ ಮತ್ತು ಕೃಷಿ ಇಲಾಖೆ ತೀವ್ರ ನಿಗಾ ಇರಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ಕಠಿಣ ಕಾನೂನು ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಇಲಾಖೆಯ ಉನ್ನತಾಧಿಕಾರಿಗಳು ಎಚ್ಚರಿಸಿದ್ದಾರೆ.

 


Share News