ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಭೂಗಳ್ಳರ ವಿರುದ್ಧ ಸಮರ ಸಾರಿದ್ದು, ದೇವನೂರು ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ.
ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ದೇವನೂರು ಗ್ರಾಮದ ಸರ್ವೆ ನಂ. 155, 156, 228/2, 229/1, 229/2 ಹಾಗೂ 153/2 ಪ್ರದೇಶಗಳಲ್ಲಿ ಸರ್ಕಾರದ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿತ್ತು. ಈ ಜಾಗದಲ್ಲಿ ಅನಧಿಕೃತವಾಗಿ ಶೆಡ್ಗಳನ್ನು ನಿರ್ಮಿಸಿ, ವಾಹನಗಳ ತಂಗುದಾಣ ಹಾಗೂ ಇತರೆ ವಾಣಿಜ್ಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿತ್ತು.
ಈ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಈ ವೇಳೆ ಭೂಸ್ವಾಧೀನಾಧಿಕಾರಿಗಳ ಪತ್ರ ಹಾಗೂ ಸರ್ಕಾರದ ಅಧಿಕೃತ ಅಧಿಸೂಚನೆಗಳನ್ನು ಪರಿಶೀಲಿಸಿದಾಗ, ಸದರಿ ಜಮೀನು ಪ್ರಾಧಿಕಾರಕ್ಕೆ ಸೇರಿದ್ದು ಹಾಗೂ ಇದನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದು ದೃಢಪಟ್ಟಿತ್ತು.
ಸ್ಥಳ ಪರಿಶೀಲನೆ ಮುಗಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಮುಡಾ ಅಧಿಕಾರಿಗಳು, ಇಂದು ಬೆಳಿಗ್ಗೆ ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಾಚರಣೆ ಆರಂಭಿಸಿದರು. ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ಜೆಸಿಬಿ ಯಂತ್ರಗಳ ಮೂಲಕ ನೆಲಸಮಗೊಳಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಪ್ರಾಧಿಕಾರಕ್ಕೆ ಸೇರಿದ ಜಮೀನನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆ ಮುಂದುವರಿಯಲಿದ್ದು, ಸಾರ್ವಜನಿಕರು ಅನಧಿಕೃತ ಲೇಔಟ್ ಅಥವಾ ಒತ್ತುವರಿ ಜಮೀನುಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಕಾರ್ಯಾಚರಣೆಯ ಮೂಲಕ ಮುಡಾ ಅಧಿಕಾರಿಗಳು ಅಕ್ರಮ ಭೂ ಒತ್ತುವರಿದಾರರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.