ಬೆಂಗಳೂರು ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೊರರಾಜ್ಯದ ಇಬ್ಬರು ಹಾಗೂ ನಾಲ್ವರು ಸ್ಥಳೀಯರು ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ.
ಈ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು 8 ಕೆಜಿ 58 ಗ್ರಾಂ ಎಂಡಿಎಂಎ, 5 ಕೆಜಿ 700 ಗ್ರಾಂ ಹೈಡೋ ಗಾಂಜಾ, 4 ಮೊಬೈಲ್ ಫೋನ್‌ಗಳು, 1 ಕಾರು ಮತ್ತು 1.62 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಮಾದಕ ವಸ್ತುಗಳ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು 20.10 ಕೋಟಿ ಎಂದು ಅಂದಾಜಿಸಲಾಗಿದೆ. ಇನ್ನು ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಜಾಲಕ್ಕೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಇತರ ವ್ಯಕ್ತಿಗಳ ಪತ್ತೆಗಾಗಿ ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಬಿಎಸ್ ನೇಮಗೌಡ ರವರ ಮಾರ್ಗದರ್ಶನದಲ್ಲಿ ನಡೆದಿದೆ. ಯಶವಂತಪುರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಮತಿ ಮೇರಿ ಶೈಲಜಾ ರವರ ನೇತೃತ್ವದಲ್ಲಿ ಈ ತಂಡವು ಕಾರ್ಯನಿರ್ವಹಿಸಿದೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಯಶವಂತಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಮಂಜುನಾಥ ಎಸ್ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಗಣಪತಿ ಆರ್ ಎಲ್ ಹಾಗೂ ಇತರ ಸಿಬ್ಬಂದಿಯವರು ಸಕ್ರಿಯವಾಗಿ ಭಾಗವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್