ನೆಲೋಗಿ: ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ನೆಲೋಗಿ ಠಾಣೆಯ “ವಿಶೇಷ ಅಪರಾಧ ನಿಗ್ರಹ ತಂಡ”ದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಟ್ಟು ₹3,15,000 ಅಂದಾಜು ಮೌಲ್ಯದ 6 ಮೋಟಾರ್ ಸೈಕಲ್ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೋಟಾರ್ ಸೈಕಲ್ಗಳು ಕಳುವಾಗುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕಳ್ಳರ ಪತ್ತೆಗಾಗಿ “ವಿಶೇಷ ಅಪರಾಧ ನಿಗ್ರಹ ತಂಡ”ವನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದರು.
ವಿಶ್ವಾಸಾರ್ಹ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿತು. ವಿಚಾರಣೆ ವೇಳೆ ಆರೋಪಿಗಳು ವಿವಿಧೆಡೆ ಬೈಕ್ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ₹3.15 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ವಾಹನಗಳನ್ನು ವಶಪಡಿಸಿಕೊಂಡ ನೆಲೋಗಿ ಠಾಣೆಯ ವಿಶೇಷ ಅಪರಾಧ ನಿಗ್ರಹ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಮೇಲಧಿಕಾರಿಗಳು ಮತ್ತು ಸಾರ್ವಜನಿಕರು ಶ್ಲಾಘಿಸಿದ್ದಾರೆ.