ಹಾಸನ: ಗೃಹಲಕ್ಷ್ಮಿ ಯೋಜನೆಯ ಬಾಂಡ್ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೂಪರ್ವೈಸರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸಕಲೇಶಪುರದಲ್ಲಿ ಗುರುವಾರ ಸಂಭವಿಸಿದೆ.
ಸಕಲೇಶಪುರ ಪಟ್ಟಣದ ಸಿಡಿಪಿಓ (CDPO) ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮಾದೇವಿ ಬಂಧಿತ ಅಧಿಕಾರಿ.
ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಬಾಂಡ್ ನೀಡುವ ಸಂಬಂಧ ದೂರುದಾರ ಆದರ್ಶ್ ಎಂಬುವವರಿಂದ ಉಮಾದೇವಿ ಅವರು 1,100 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಆದರ್ಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಸಂಜೆ ಕಚೇರಿಯಲ್ಲಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಹಣದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ದಾಳಿಯ ವೇಳೆ ಮತ್ತೊಂದು ಬೆಚ್ಚಿಬೀಳಿಸುವ ಅಂಶ ಬೆಳಕಿಗೆ ಬಂದಿದ್ದು, ಕೇವಲ ಒಬ್ಬರಿಂದ ಮಾತ್ರವಲ್ಲದೆ, ಒಟ್ಟು 74 ಫಲಾನುಭವಿಗಳಿಂದಲೂ ಹಣಕ್ಕೆ ಒತ್ತಾಯ ಮಾಡಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಬಡವರಿಂದ ಹಣ ವಸೂಲಿ ಮಾಡುತ್ತಿದ್ದ ಜಾಲದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ. ಬಂಧಿತ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ಲಂಚಕ್ಕೆ ಕೈಯೊಡ್ಡುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನಡೆಸಿದ ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.