ಭಟ್ಕಳ: ನಗರದಲ್ಲಿ ಮೂರಿನಕಟ್ಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಎದ್ದಿರುವ ವದಂತಿಗಳಿಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮೂಲ ಮೂರಿನಕಟ್ಟೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಅವರು ಛಾಯಾಚಿತ್ರಗಳ ಸಮೇತ ದೃಢಪಡಿಸಿದ್ದಾರೆ. ಮೂಲ ಕಟ್ಟೆಯನ್ನು ಕೆಡವಲಾಗಿದೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಅದು ಇದ್ದ ಜಾಗದಲ್ಲೇ ಯಥಾಸ್ಥಿತಿಯಲ್ಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ಮೂಲ ಮೂರಿನಕಟ್ಟೆಯನ್ನು ಸ್ಥಳಾಂತರ ಮಾಡಲು ಈ ಹಿಂದೆ ಆದೇಶಿಸಲಾಗಿತ್ತು. ಆದರೆ, ಸ್ಥಳೀಯರ ನಿರಂತರ ಮನವಿಯ ಬಳಿಕ ಹೆದ್ದಾರಿ ಪ್ರಾಧಿಕಾರ (NHAI) ಸಿಬ್ಬಂದಿ ಮೂಲ ಕಟ್ಟೆಯ ಪಕ್ಕದಲ್ಲೇ ಜಾಗ ಗುರುತಿಸಿ ಹೊಸ ಪರ್ಯಾಯ ಕಟ್ಟೆಯನ್ನು ನಿರ್ಮಿಸುತ್ತಿದ್ದರು. ಈ ಹೊಸ ಕಟ್ಟೆ ನಿರ್ಮಾಣದ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶದೊಂದಿಗೆ ಹರಿಬಿಡಲಾಗಿತ್ತು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಒಂದು ಗುಂಪು, ಹೊಸದಾಗಿ ನಿರ್ಮಿಸುತ್ತಿದ್ದ ಪರ್ಯಾಯ ಕಟ್ಟೆಯನ್ನು ದೂಡಿಹಾಕಿ ತೆರವುಗೊಳಿಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆಯೇ ಉದ್ರಿಕ್ತ ಗುಂಪು ಹಲ್ಲೆ ನಡೆಸಿ ಗಲಾಟೆ ಸೃಷ್ಟಿಸಿದೆ. ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಮಾಂಕಾಳು ವೈದ್ಯ ಅವರಿಗೂ ಕೆಲವರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ.
ತಡರಾತ್ರಿ ಅದೇ ಸ್ಥಳದಲ್ಲಿ ಮರಳಿ ಕಟ್ಟೆ ನಿರ್ಮಿಸಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಗಲಭೆ, ಹೆದ್ದಾರಿ ತಡೆ, ಪೊಲೀಸರ ಮೇಲಿನ ಹಲ್ಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಒಟ್ಟು 4 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಮಂದಿಯನ್ನು ಬಂಧಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಹಾಗೂ ಭಟ್ಕಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಭಟ್ಕಳ ಪಟ್ಟಣ ಪಂಚಾಯಿತಿ ಮತ್ತು ಜಾಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಿಷೇಧಾಜ್ಞೆ (BNSS ಸೆಕ್ಷನ್ 163 / ಸಿಆರ್‌ಪಿಸಿ 144) ಜಾರಿಗೊಳಿಸಲಾಗಿದೆ.
ಬಿಗಿ ಭದ್ರತೆಗಾಗಿ 9 ಕೆ.ಎಸ್.ಆರ್.ಪಿ (KSRP) ಹಾಗೂ 3 ಡಿ.ಎ.ಆರ್ (DAR) ತುಕಡಿಗಳು ಸೇರಿದಂತೆ ಪಕ್ಕದ ಜಿಲ್ಲೆಗಳಿಂದಲೂ 300ಕ್ಕೂ ಅಧಿಕ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಶಾಂತಿಯುತವಾಗಿದೆ ಎಂದು ಜಿಲ್ಲಾ ಎಸ್‌ಪಿ ತಿಳಿಸಿದ್ದಾರೆ.
ಫೇಸ್‌ಬುಕ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಆಧಾರರಹಿತ ವದಂತಿಗಳು ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು. ಊಹಾಪೋಹಗಳಿಗೆ ಕಿವಿಗೊಡದೆ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.